ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯ ಸ್ಥಗಿತ : ಬಿ.ಎಸ್.ವೈ.

ಬೆಂಗಳೂರು : ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿವೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಕ್ಷೇಪಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಸರಕಾರ ಮುಂದೆ ಹೋಗುತ್ತಿಲ್ಲ. ಚಕ್ರದಲ್ಲಿ ಗಾಳಿ ಇಲ್ಲದೆ ಮುಂದೆ ಹೋಗದ ವಾಹನದಂತಾಗಿದೆ ಸರಕಾರದ ಪರಿಸ್ಥಿತಿ ಎಂದು ಟೀಕಿಸಿದರು.
ಅಪಾರ ಭರವಸೆ ನೀಡಿದ ನಂತರ ಅಧಿಕಾರಕ್ಕೆ ಬಂದ ಈ ಸರಕಾರವು ತಮ್ಮ ಆಶ್ವಾಸನೆ ಈಡೇರಿಸಲು ಪರದಾಡುತ್ತಿದೆ. ಸಿದ್ದರಾಮಯ್ಯನವರು ಎರಡನೇ ಅವಧಿಯಲ್ಲಿ ಪಕ್ಷದ ಮೇಲೆ ಹಿಡಿತ ಇಲ್ಲದ, ಸರಕಾರದ ಮೇಲೆ ನಿಯಂತ್ರಣ ಇಲ್ಲದ ವಿಚಿತ್ರ ಪರಿಸ್ಥಿತಿಯಲ್ಲಿ ಇದ್ದಾರೆ ಎಂದು ವಿಶ್ಲೇಷಿಸಿದರು.
ಉಚಿತ ಬಸ್ ಪ್ರಯಾಣ ಯೋಜನೆ ಹೊರತುಪಡಿಸಿ ಗೃಹಲಕ್ಷ್ಮಿ ಯೋಜನೆಯು ಅರ್ಧದಷ್ಟು ಮಹಿಳೆಯರಿಗೆ ತಲುಪಿಲ್ಲ. ಬರಿಯ ಉಚಿತ ಕೊಡುಗೆಗಳ ಸಂಪನ್ಮೂಲ ಕ್ರೋಡೀಕರಣಕ್ಕೆ ಕಸರತ್ತು ಮಾಡುತ್ತಿದ್ದಾರೆ. ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿವೆ. ಉಚಿತವಾಗಿ ವಿದ್ಯುತ್ ಕೊಡುವುದಾಗಿ ಹೇಳಿದವರು ವಿದ್ಯುತ್ ದರದಲ್ಲಿ ಭಾರಿ ಹೆಚ್ಚಳ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
ಬರಪೀಡಿತ ಪ್ರದೇಶಕ್ಕೆ ಮುಖ್ಯಮಂತ್ರಿ ಸೇರಿ ಒಬ್ಬರೇ ಒಬ್ಬ ಸಚಿವರೂ ಹೋಗಿ ಅಲ್ಲಿನ ವಾಸ್ತವಿಕ ಸ್ಥಿತಿ ತಿಳಿಯಲಿಲ್ಲ. ಸರಕಾರ ದಿವಾಳಿಯಾಗಿದ್ದು, ಎಂಎಲ್ಎ ಅನುದಾನದ ಎರಡು ಕೋಟಿ ಪೈಕಿ ಕೇವಲ 50 ಲಕ್ಷ ಮಾತ್ರ ಬಿಡುಗಡೆ ಮಾಡಿದ್ದಾರೆ. ಪ್ರಮುಖವಾದ ಎಸ್ಸಿ, ಎಸ್ಟಿ ಯೋಜನೆಗಳ ಅನುಷ್ಠಾನಕ್ಕೆ ನಿಗಮಗಳಿಗೆ ಹಣ ಬಿಡುಗಡೆ ಮಾಡಿಲ್ಲ. ತಾಂಡಾ ನಿಗಮ, ಅಂಬೇಡ್ಕರ್ ನಿಗಮ, ಬೋವಿ ಅಭಿವೃದ್ಧಿ ನಿಗಮ, ವಾಲ್ಮೀಕಿ ನಿಗಮ ಸೇರಿ ಯಾವುದಕ್ಕೂ ಒಂದು ಪೈಸೆ ಹಣ ನೀಡಿಲ್ಲ ಎಂದು ಆರೋಪಿಸಿದರು.
ರೈತರು ಬರಗಾಲದ ಸಂಕಷ್ಟ ಅನುಭವಿಸುವ ಈ ಸಂದರ್ಭದಲ್ಲಿ ಕೃಷಿ ಪಂಪ್ಸೆಟ್ಗಳಿಗೆ ಟ್ರಾನ್ಸ್ಫಾರ್ಮರ್ ಸಹಿತ ಉಚಿತ ಮೂಲಸೌಕರ್ಯ ಒದಗಿಸುವ ಯೋಜನೆಯನ್ನು ರಾಜ್ಯ ಸರಕಾರ ರದ್ದು ಮಾಡಿದೆ. ಕೃಷಿ ಪಂಪ್ಸೆಟ್ ವಿದ್ಯುತ್ ಸಂಪರ್ಕದ ಖರ್ಚನ್ನು ರೈತರೇ ಭರಿಸಬೇಕು ಎಂಬ ಆದೇಶ ಮಾಡಲು ಮುಂದಾಗಿದ್ದಾರೆ ಎಂದು ಆಕ್ಷೇಪಿಸಿದರು.
ಉಚಿತ ಕೊಡುಗೆಗಳಿಗೇ ಹಣ ಇಲ್ಲ; ಅಭಿವೃದ್ಧಿ ಕಾರ್ಯಗಳು ರಾಜ್ಯದೆಲ್ಲೆಡೆ ಸಂಪೂರ್ಣ ಸ್ಥಗಿತವಾಗಿದೆ. ಐಟಿ ದಾಳಿಯಲ್ಲಿ 100 ಕೋಟಿ ಲಭಿಸಿದ್ದು, ಸರಕಾರದ ಭ್ರಷ್ಟಾಚಾರ ಬಯಲಾಗಿದೆ. ಲೂಟಿಕೋರ ಸರಕಾರ ಇದೆಂದು ಸಾಬೀತಾಗಿದೆ ಎಂದರು.

Share this :