ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಗೆ ಕಾನೂನು ಬೆಂಬಲ ನೀಡಿ- ಮುಖ್ಯಮಂತ್ರಿಯವರಿಗೆ ಡಾ.ಪುರುಷೋತ್ತಮ ಬಿಳಿಮಲೆ ಒತ್ತಾಯ.
ಬೆಂಗಳೂರು, 19-ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸರ್ಕಾರಕ್ಕೆ ಸಲ್ಲಿಸಿರುವ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಗೆ ಶೀಘ್ರವಾಗಿ ಕಾನೂನು ಬಲ ದೊರಕಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಕುರಿತಂತೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಡಾ. ಬಿಳಿಮಲೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಇಂದಿನ ಜಾಗತೀಕರಣ ಕಾಲಘಟ್ಟಕ್ಕೆ ಅನುಗುಣವಾದ ಕನ್ನಡ ಪರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು ಕನ್ನಡದ ಉಳಿವಿನ ದೃಷ್ಠಿಯಿಂದ ಇದು ಮಹತ್ವದ ವರದಿಯಾಗಿದೆ ಎಂದಿದ್ದಾರೆ.
ಈ ವರದಿಯಲ್ಲಿ ಖಾಸಗಿ ವಲಯದ ವಿವಿಧ ವರ್ಗಗಳ ಹುದ್ದೆಗಳಲ್ಲಿ ಕನ್ನಡಿಗರಿಗೆ ಆದ್ಯತೆ; ರಾಜ್ಯದಲ್ಲಿ ವ್ಯವಹರಿಸುವ ಬ್ಯಾಂಕುಗಳಲ್ಲಿ ನೇಮಕ ಹೊಂದುವ ಅಭ್ಯರ್ಥಿಗಳಿಗೆ ಕನ್ನಡದ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಷರತ್ತು; ಸರ್ಕಾರಿ ವಲಯದ ಉದ್ಯಮಗಳಲ್ಲಿ ಕನ್ನಡಿಗರ ಆದ್ಯತೆಯ ಆಯ್ಕೆ, ಅಪ್ರೆಂಟಿಸ್ ಆಯ್ಕೆಯಲ್ಲಿ, ಕಾರ್ಮಿಕರ, ಗುತ್ತಿಗೆ, ದಿನಗೂಲಿ ನೌಕರರ ನೇಮಕಾತಿಗಳಲ್ಲಿ ಕೇವಲ ಕನ್ನಡಿಗರಿಗೆ ಅವಕಾಶ, ತಂತ್ರಜ್ಞಾನ ಬೆಳವಣಿಗೆಗೆ ಅನುಗುಣವಾಗಿ ಉದ್ಯೋಗ ತರಬೇತಿಗೆ ಪ್ರತ್ಯೇಕ ತಾಂತ್ರಿಕ ಸಲಹಾ ಮಂಡಳಿ ಸ್ಥಾಪನೆ; ನಾಮಫಲಕಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ, ಕೇಂದ್ರ ಪಠ್ಯಕ್ರಮ ಶಿಕ್ಷಣದಲ್ಲಿ 1 ರಿಂದ10ನೇ ತರಗತಿಯವರೆಗೆ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಿಕೆ ಸೇರಿದಂತೆ ಒಟ್ಟು 14 ಅನುಷ್ಠಾನ ಯೋಗ್ಯ ಅಂಶಗಳಿದ್ದು ಮುಂದಿನ ಅಧಿವೇಶನದಲ್ಲಿ ಪ್ರಾಧಿಕಾರದ ವರದಿಯನ್ನು ಮಂಡಿಸಿ ರಾಜ್ಯ ಸರ್ಕಾರದ ಕನ್ನಡ ಬದ್ಧತೆಯನ್ನು ಸ್ಥಿರೀಕರಿಸಬೇಕೆಂದು ಡಾ.ಬಿಳಿಮಲೆ ಮುಖ್ಯಮಂತ್ರಿಯವರನ್ನು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಶಿವರಾಜ ತಂಗಡಗಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರಾದ ಡಾ.ಸಂತೋಷ ಹಾನಗಲ್ಲ ಮತ್ತಿತರರು ಇದ್ದರು.
ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರಿ ಶಾಲೆಗಳನ್ನು ದತ್ತುಪಡೆದುಕೊಳ್ಳಲು ಮನವಿ : ಬಿಳಿಮಲೆ
ಪ್ರತಿಯೊಬ್ಬ ಶಾಸಕರು ತಮ್ಮ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅವುಗಳನ್ನು ಸಬಲೀಕರಣಗೊಳಿಸಿ ಮಾದರಿ ಶಾಲೆಯನ್ನಾಗಿ ಮಾಡುವಂತೆ ರಾಜ್ಯದ 224 ಶಾಸಕರುಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ವಿಧಾನ ಸಭಾಧ್ಯಕ್ಷರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಹಾಗೂ ಎಲ್ಲ ಶಾಸಕರುಗಳಿಗೆ ತಾವು ಪ್ರತಿನಿಧಿಸುತ್ತಿರುವ ವಿಧಾನಸಭಾ ಕ್ಷೇತ್ರದಲ್ಲಿ ದುರಸ್ಥಿಯಲ್ಲಿರುವ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಸಬಲೀಕರಣಗೊಳಿಸಿ ಮಾದರಿ ಶಾಲೆಯನ್ನಾಗಿ ಮಾಡುವಂತೆ ಪ್ರಾಧಿಕಾರ ಎಲ್ಲರಿಗೂ ಪತ್ರ ಬರೆದಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಾಜ್ಯದಲ್ಲಿ ನಿರಂತರ ಚರ್ಚೆಯ ಮೂಲಕ ಸರ್ಕಾರಿ ಕನ್ನಡ ಶಾಲೆಗಳನ್ನು ಬಲಗೊಳಿಸಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ನೀತಿ ನಿರೂಪಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡುತ್ತಾ ಬಂದಿದೆ. ಆದರೂ ಕಳೆದ ಒಂದೂವರೆ ದಶಕದಿಂದ ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ದುರ್ಬಲಗೊಳ್ಳುತ್ತಿದ್ದು, ಶಿಕ್ಷಣದ ಖಾಸಗೀಕರಣ ಹಾಗೂ ವ್ಯಾಪಾರೀಕರಣ ನಾಗಲೋಟದಲ್ಲಿ ಸಾಗುತ್ತಿದೆ.
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಉತ್ತಮ ಕಲಿಕಾ ವಾತಾವರಣವನ್ನು ಸೃಷ್ಟಿಸಿ, ಶಾಲೆಗಳಲ್ಲಿ ಕಲಿಕೆಯನ್ನು ಕೇಂದ್ರ ಬಿಂದುವನ್ನಾಗಿಸಲು ಸಾಧ್ಯವಾಗಬಹುದಾದ ರೀತಿಯಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಪುನರ್ ರಚಿಸುವುದು ಇಂದಿನ ತುರ್ತು ಅಗತ್ಯ. ದಿನದಿಂದ ದಿನಕ್ಕೆ ತೀರ ದುರ್ಬಲ ಸ್ಥಿತಿ ಮುಟ್ಟುತ್ತಿರುವ ಸರ್ಕಾರಿ ಶಾಲೆಗಳ ಸಬಲೀಕರಣವಾಗದ ಹೊರತು ಉಚಿತ ಹಾಗೂ ಕಡ್ಡಾಯ ಶಿಕ್ಷಣದ ಉದ್ದೇಶ ಸಫಲವಾಗುವುದಿಲ್ಲ. ಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಉಳಿಯಬಲ್ಲದು. ಈ ನಿಟ್ಟಿನಲ್ಲಿ ನಾವೆಲ್ಲರೂ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಯೋಚಿಸಿ ಕಾರ್ಯನ್ಮೋಖವಾಗಬೇಕಿದೆ. ಆದ್ದರಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಶಯವಾದ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ತಾವುಗಳು ಕೈ ಜೋಡಿಸುವಿರಿ ಎಂದು ನಂಬಿದ್ದೇವೆ.
ತಾವು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅವುಗಳನ್ನು ಸಬಲೀಕರಣಗೊಳಿಸುವಂತೆ ಕೋರಿದೆ. ಈ ಕುರಿತು ತಮಗೆ ಹೆಚ್ಚಿನ ಮಾಹಿತಿಯ ಅಗತ್ಯವಿದ್ದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದು ಪ್ರಾಧಿಕಾರ ಬರೆದಿರುವ ಪತ್ರದಲ್ಲಿ ತಿಳಿಸಿದೆ.
ಅಧ್ಯಕ್ಷರ ಕಾರ್ಯಾಲಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ವಿಧಾನಸೌಧ, ಬೆಂಗಳೂರು.
ಬೆಂಗಳೂರು-‘ಗವಿಮಾರ್ಗ’ ಪುಸ್ತಕ ಬಿಡುಗಡೆ, ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮತ್ತು ಮಂಡಲ್ ವರದಿ ಆಗಿದ್ದೇನು? ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವು ಡಿಸೆಂಬರ್ 01, (ಶುಕ್ರವಾರ) 2023 ರಂದು ಬೆಳಿಗ್ಗೆ 11 ಗಂಟೆಗೆ ಕ್ವೀನ್ಸ್ ರಸ್ತೆಯಲ್ಲಿರುವ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ನಡೆಯಲಿದೆ.
ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು ಡಾ.ಎಂ.ಎಸ್.ಮಣಿ ಅವರು ಬರೆದಿರುವ ‘ಗವಿಮಾರ್ಗ’ ಪುಸ್ತಕವನ್ನು ಬಿಡುಗಡೆ ಮಾಡುವವರು. ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಅವರು ವಿಚಾರ ಸಂಕಿರಣ ಉದ್ಘಾಟಿಸುವರು, ಮಾಜಿ ಸಚಿವ ಎಚ್.ಆಂಜನೇಯ ಅವರು ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದ ಅಧ್ಯಕ್ಷ ಕೆ.ಆರ್.ನೀಲಕಂಠ ಅಧ್ಯಕ್ಷತೆ ವಹಿಸುವರು.
ಶ್ರೀ ಷಡಕ್ಷರಿ ಮುನಿ ದೇಶೀಕೇಂದ್ರ ಸ್ವಾಮೀಜಿ, ಪೀಠಾಧ್ಯಕ್ಷರು, ಆದಿ ಜಾಂಬವ ಬೃಹನ್ಮಠ ಹಿರಿಯೂರು ನಗರ, ಇವರು ಪುಸ್ತಕ ಪರಿಚಯ ಮಾಡಿಕೊಡಲಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹೆಚ್.ಕಾಂತರಾಜ ಮತ್ತು ಡಾ.ಮನೋಹರ್ ಯಾದವ್, ನಿವೃತ್ತ ಪ್ರಾಧ್ಯಾಪಕರು, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ, ಬೆಂಗಳೂರು ಇವರು ‘ಮಂಡಲ್ ವರದಿ ಆಗಿದ್ದೇನು?’ ಎಂಬ ವಿಚಾರದ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ಪ್ರಜಾಪ್ರಗತಿ ಸಂಪಾದಕ ಎಸ್.ನಾಗಣ್ಣ ಹಾಗೂ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಅವರು ವಿಷಯದ ಮೇಲೆ ಪ್ರತಿಕ್ರಿಯಿಸುವರು.
ಎಂ. ಸಿದ್ದರಾಜು, ಮಾಜಿ ಅಧ್ಯಕ್ಷರು, ಕರ್ನಾಟಕ ಮಾಧ್ಯಮ ಅಕಾಡೆಮಿ, ಹೆಚ್.ಕಾಂತರಾಜ, ಮಾಜಿ ಅಧ್ಯಕ್ಷರು, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ, ಲಕ್ಷö್ಮಣ ಕೊಡಸೆ, ಅಧ್ಯಕ್ಷರು ಜನಮನ ಪ್ರತಿಷ್ಠಾನ, ಟಿ.ಎಸ್.ಆರ್ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಗಂಗಾಧರ ಮೊದಲಿಯಾರ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಅಧ್ಯಕ್ಷ ಪ್ರೊ|| ಬಿ.ಕೆ.ರವಿ ಇವರುಗಳಿಗೆ ವಿ.ಪಿ.ಸಿಂಗ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಎಂದು ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರ್. ನವೆಂಬರ್ . 01.. ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಇಂದು ರವೀಂದ್ರ ಕಲಾಕ್ಷೇತ್ರ ದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ.* *ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ ** ದಲ್ಲಿ ಭಾಗವಹಿಸಿ ಮಾತನಾಡಿದರು.
ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ಬೃಹತ್ ಕನ್ನಡ ಭವನ ನಿರ್ಮಾಣ: ಸಿದ್ದರಾಮಯ್ಯ
ಸಮಾಜಕ್ಕೆ ಕೊಡುಗೆ ನೀಡಿ ಸಮಾಜದ ಋಣ ತೀರಿಸಲು ಸಾಧ್ಯ
ಬೆಂಗಳೂರು, ನವೆಂಬರ್ 1 :
ಕರ್ನಾಟಕ ಸಂಭ್ರಮ 50ರ ಸವಿನೆನಪಿಗಾಗಿ ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ದೊಡ್ಡ ಕನ್ನಡ ಭವನವನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
1956ರ ನವೆಂಬರ್ 1 ರಂದು ಕನ್ನಡ ಭಾಷಿಕ ಪ್ರದೇಶಗಳು ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ನಂತರ 1973ರಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರ ಅವಧಿಯಲ್ಲಿ ಮೈಸೂರು ರಾಜ್ಯವನ್ನು ‘ಕರ್ನಾಟಕ’ ಎಂದು ಮರು ನಾಮಕರಣ ಮಾಡಲಾಯಿತು ಎಂದರು.
ಕನ್ನಡದ ಹಿರಿಮೆ ಬಿಂಬಿಸುವ ಕರ್ನಾಟಕ ಸಂಭ್ರಮ – 50:
ಕರ್ನಾಟಕಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರ ಸಂಭ್ರಮಾಚರಣೆ ಮಾಡಬೇಕಿತ್ತು. ಆದರೆ ಅವರು ಮಾಡಲಿಲ್ಲ. ನಮ್ಮ ಸರ್ಕಾರ ಈ ಸಂಭ್ರಮಾಚರಣೆಯನ್ನು ಆಚರಿಸುವು ನಮ್ಮ ಕರ್ತವ್ಯವೆಂದು ಭಾವಿಸಿ, ಇಡೀ ವರ್ಷಕನ್ನಡ ನೆಲ, ಜಲ ಸಾಹಿತ್ಯ, ಸಂಸ್ಕೃತಿ, ಪರಂಪರೆಗಳನ್ನು ಬಿಂಬಿಸುವ ‘ಕರ್ನಾಟಕ ಸಂಭ್ರಮ- 50’ ಕಾರ್ಯಕ್ರಮಗಳನ್ನು ಸರ್ಕಾರ ರೂಪಿಸಿದೆ. ‘ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ’ ಎಂಬ ಘೋಷ ವಾಕ್ಯದಡಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಮ್ಮ ಉಸಿರು ಕನ್ನಡವಾಗಬೇಕು. ಇಡೀ ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಾಣವಾಗಬೇಕು ಎಂದು ತಿಳಿಸಿದರು.
ಅವಕಾಶ ವಂಚಿತರು ಮುಖ್ಯವಾಹಿನಿಗೆ ಬರಬೇಕು:
ವಚನಗಳು ಭಾರತಕ್ಕೆ ಮಾತ್ರವಲ್ಲ. ಇಡೀ ವಿಶ್ವಕ್ಕೆ ಅಗತ್ಯ. ಜಾತಿ ವ್ಯವಸ್ಥೆ ಕಾರಣಕ್ಕಾಗಿ, ಸಾಮಾಜಿಕ, ಆರ್ಥಿಕ, ರಾಜಕೀಯ ಅಸಮಾನತೆ ನಿರ್ಮಾಣವಾಗಿದೆ. ಶತಮಾನಗಳಿಂದ ಶೂದ್ರರು ಹಾಗೂ ಮಹಿಳೆಯರು ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು.ಸಮ ಸಮಾಜ ನಿರ್ಮಾಣವಾಗಬೇಕಾದರೆ ಅವಕಾಶವಂಚಿತರು, ದುರ್ಬಲರು ಮುಖ್ಯವಾಹಿನಿಗೆ ಬರಬೇಕು. ಅಂತಹ ಜನರನ್ನು ಗುರುತಿಸಿ, ಸಾಮಾಜಿಕ, ಆರ್ಥಿಕ ನ್ಯಾಯ ಕೊಡುವ ಬಗ್ಗೆ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ ಎಂದರು.
ವಚನ ಸಂಸ್ಕೃತಿ ಅಭಿಯಾನ :
ಅಸಮಾನತೆ ಇರುವ ಸಮಾಜದಲ್ಲಿ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ. ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಇಂತಹ ಾಶಯಗಳನ್ನೇ ಬಸವಣ್ಣನವರು, ಅಂಬೇಡ್ಕರ್ ರವರು ತಿಳಿಸಿದರು. ಶ್ರೀ ನಿಜಗುಣ ಸ್ವಾಮೀಜಿ ಅವರು ಹೇಳಿದಂತೆ ವಚನ ಸಂಸ್ಕೃತಿ ಅಭಿಯಾನ ಸರ್ಕಾರ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.
ಶಕ್ತಿಯಿಲ್ಲದವರಿಗೆ ಶಕ್ತಿ ತುಂಬುವ ಯೋಜನೆಗಳು :
ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯಡಿ 86 ಕೋಟಿ ಮಹಿಳೆಯರು ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಶಕ್ತಿ ಇರುವವರಿಗೆ ಶಕ್ತಿ ಕೊಡುವುದಲ್ಲ. ಶಕ್ತಿ ಇಲ್ಲದವರಿಗೆ ಶಕ್ತಿ ತುಂಬ ಬೇಕೆನ್ನುವುದೇ ಪಂಚ ಗ್ಯಾರಂಟಿ ಯೋಜನೆಗಳ ಉದ್ದೇಶ ಎಂದರು.
ಸಮಾಜಸೇವೆಯ ಮೂಲಕ ಋಣ ತೀರಿಸಲು ಸಾಧ್ಯ :
ಪ್ರೀತಿ, ವಿಶ್ವಾಸ, ಮನುಷ್ಯತ್ವ ಬಹಳ ಮುಖ್ಯ. ಮನುಷ್ಯತ್ವ ಇಲ್ಲದಿದ್ದರೆ ಅದು ಸಮಾಜವೇ ಅಲ್ಲ. ನಾವೆಲ್ಲರೂ ಕೂಡ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ಕೊಟ್ಟರೆ ಮಾತ್ರ ಬದುಕು ಸಾರ್ಥಕವಾಗುತ್ತದೆ. ನಾವು ಹುಟ್ಟಿದ ಮೇಲೆ ಸಮಾಜದಿಂದ ಎಲ್ಲವನ್ನೂ ಪಡೆದಿದ್ದೇವೆ ಎಂದ ಮೇಲೆ , ಸಮಾಜದ ಪರ ಕೆಲಸ ಮಾಡುವ ಮೂಲಕ ಸಮಾಜದ ಋಣ ತೀರಿಸಲು ಸಾಧ್ಯ. ಇಂತಹ ಕೆಲಸವೇ ಸಮಾಜ ಸೇವೆ ಎಂದರು.
ಅರ್ಹತೆಯುಳ್ಳವರಿಗೆ ಪ್ರಶಸ್ತಿ :
ಕರ್ನಾಟಕ ಸಂಭ್ರಮದ ಶುಭಸಂದರ್ಭದಲ್ಲಿ ಪ್ರಶಸ್ತಿಗೆ ಭಾಜನರಾಗಿರುವ ಎಲ್ಲ 68 ಪ್ರಶಸ್ತಿ ಪುರಸ್ಕೃತರ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಬಾರಿ 10 ಸಂಘ- ಸಂಸ್ಥೆಗಳಿಗೆ ಈ ವಿಶೇಷವಾಗಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಹೆಚ್ಚು ಅರ್ಹತೆ ಇದ್ದವರನ್ನು ಆಯ್ಕೆ ಮಾಡಬೇಕೆಂಬ ಸೂಚನೆಯನ್ನು ನೀಡಲಾಗಿತ್ತು. ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಒಂದು ಹೆಸರನ್ನು ಬಿಟ್ಟು ಬೇರೆ ಯಾರ ಹೆಸರನ್ನು ನಾನು ಸೂಚಿಸಿಲ್ಲ. ಬಹುತೇಕವಾಗಿ ಆಯ್ಕೆ ಸಮಿತಿ ಶಿಫಾರಸ್ಸು ಮಾಡಿದವರಿಗೆ ಪ್ರಶಸ್ತಿ ನೀಡಲಾಗಿದೆ ಎಂದು ತಿಳಿಸಿದರು.
ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಹೆಸರಿನಲ್ಲಿ ಇಡೀ ವರ್ಷ ಸ್ವಾಭಿಮಾನಿ ಕನ್ನಡ ಸಾಂಸ್ಕೃತಿಕ ಸಂಭ್ರಮ
ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು ನ 1 : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು.
ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದರು.
ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದರು.
ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಉದಾಹರಿಸಿದರು.
ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು , ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆಧ್ಯತೆ ಎಂದರು.
ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ಷಾನ್ ಹರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.