by gadi@dmin | Oct 16, 2023 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ಕನ್ನಡ ನಾಡು ನುಡಿ, ರಾಜ್ಯ
ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ, ಅರ್ಥಪೂರ್ಣವಾಗಿ ವಿಶ್ವ ವಿಖ್ಯಾತ ದಸರಾ ಉದ್ಘಾಟಿಸಿದರು.
ಮೈಸೂರು-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳ ಜತೆಗಿದ್ದರು.
ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ, ಅರ್ಥಪೂರ್ಣವಾಗಿ ಉದ್ಘಾಟಿಸಿದರು.
ಪಲ್ಲಕ್ಕಿಯಲ್ಲಿ ಅಲಂಕೃತ ಗೊಂಡಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸಿದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ,ವ ಸದಸ್ಯ ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ ದಸರಾ ವಿಶೇಷಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿ.ಪಂ. ಸಿಇಓ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ನಗರಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.
by gadi@dmin | Oct 5, 2023 | Home Page - Highlights ( Red Background ), Scrolling News ( Right to Left ), Top ಸುದ್ದಿಗಳು, ಕನ್ನಡ ನಾಡು ನುಡಿ, ರಾಜ್ಯ
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷ:
ಸರ್ಕಾರದಿಂದ ವರ್ಷವಿಡೀ ಕರ್ನಾಟಕ ಸಂಭ್ರಮ
ಕರ್ನಾಟಕದ ದೇಶೀ ಸಂಸ್ಕೃತಿ ಹೆಚ್ವು ಬಿಂಬಿತವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಹೆಸರಿನಲ್ಲಿ 01 ನವೆಂಬರ್ 2023 ರಿಂದ 01 ನವೆಂಬರ್ 2024 ರವರೆಗೆ ಕರ್ನಾಟಕ ಸಂಭ್ರಮ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಕರ್ನಾಟಕ ಎಂದು ನಾಮಕರಣ ಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸುವ ಕುರಿತು ಚರ್ಚಿಸಲು ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ದೇಶೀ ಕ್ರೀಡೆಗಳನ್ನು ಹಮ್ಮಿಕೊಳ್ಳುವುದು, ಕರ್ನಾಟಕದ ದೇಶೀ ಸಂಸ್ಕೃತಿ ಹೆಚ್ವು ಬಿಂಬಿಸಬೇಕು, ಕನ್ನಡ ನಾಡು, ಸಂಸ್ಕೃತಿ ಮತ್ತು ಪ್ರಾದೇಶಿಕ ಭವ್ಯತೆಯನ್ನು ಈ ಸಂದರ್ಭದಲ್ಲಿ ಯುವ ಪೀಳಿಗೆಗೂ ದಾಟಿಸುವ ರೀತಿ ಅರ್ಥಪೂರ್ಣ ಮತ್ತು ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಮುಖ್ಯ ಮಂತ್ರಿಗಳು ಸೂಚಿಸಿದರು.
ನಾಡಿನ ಸಾಹಿತಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ಸ್ಮಾರಕ ಅಭಿವೃದ್ಧಿ , ಜೀರ್ಣೋದ್ಧಾರ
ವಿಧಾನಸೌಧ ಹಾಗೂ ಶಾಸಕರ ಭವನದ ಮಧ್ಯೆ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸುವುದು, ಮೈಸೂರಿನಲ್ಲಿ ದೇವರಾಜ ಅರಸರ ಪ್ರತಿಮೆ ಸ್ಥಾಪನೆ, ಧಾರವಾಡದ ದಿ: ಅದರಗುಂಚಿ ಶಂಕರಗೌಡ , ಬಳ್ಳಾರಿಯ ಹುತಾತ್ಮ ರಂಜಾನ್ ಸಾಬ್ ಹಾಗೂ ಗದಗ ಜಿಲ್ಲೆಯ ದಿ: ಅಂದಾನಪ್ಪ ದೊಡ್ಡಮೇಟಿ ಅವರ ಸ್ಮಾರಕ ಅಭಿವೃದ್ಧಿ , ಜೀರ್ಣೋದ್ಧಾರ ಕಾರ್ಯ ಹಮ್ಮಿಕೊಳ್ಳುವುದು ಸೇರಿದಂತೆ ಹಲವು ರೀತಿಯ ಕಾರ್ಯಕ್ರಮಗಳನ್ನು ರೂಪಿಸಲು ತೀರ್ಮಾನಿಸಲಾಯಿತು.
ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ
ಹಲ್ಮಿಡಿ ಶಾಸನದ ಪ್ರತಿಕೃತಿಗಳ ಸ್ಥಾಪನೆ, ಲೇಸರ್ ಶೋ/ ಧ್ವನಿ, ಬೆಳಕು ಕಾರ್ಯಕ್ರಮ, ಕರ್ನಾಟಕಕ್ಕೆ ಕೊಡುಗೆ ನೀಡಿದ 50 ಮಹಿಳೆಯರಿಗೆ ಪ್ರಶಸ್ತಿ ನೀಡುವುದು ಹಾಗೂ ನವೆಂಬರ್ 2024 ಕ್ಕೆ ಸಮಾರೋಪ ಸಮಾರಂಭ ಕಾರ್ಯಕ್ರಮ ಆಯೋಜಿಸುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಲಾಂಛನ
ಕರ್ನಾಟಕ ಸಂಭ್ರಮ – 50 ಕಾರ್ಯಕ್ರಮದ ಲಾಂಛನವನ್ನು ಅಕ್ಟೋಬರ್ 17 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಯಿತು.
by gadi@dmin | Oct 5, 2023 | Scrolling News ( Right to Left ), Top ಸುದ್ದಿಗಳು, ಕನ್ನಡ ನಾಡು ನುಡಿ
ಸಾಗರದಾಚೆ ಕನ್ನಡ ಡಿಂಡಿಮ
ಬಹರೇನ್ ಕನ್ನಡ ಭವನದ ಮೊಗಸಾಲೆ ನಾಳೆ (ಅ.6) ಲೋಕಾರ್ಪಣೆ
ಮನಾಮ (ಬಹರೇನ್): ಬಹರೇನ್ ಕನ್ನಡ ಭವನದಲ್ಲಿ ಹೊಸದಾಗಿ ನಿರ್ಮಿಸಿರುವ ಮೊಗಸಾಲೆಯ (ಹಜಾರ) ಲೋಕಾರ್ಪಣೆ ಶುಕ್ರವಾರ (ನಾಳೆ) ನಡೆಯಲಿದೆ.
ಅಕ್ಟೋಬರ್ 6ರ ಬೆಳಿಗ್ಗೆ 10ಕ್ಕೆ ಇಲ್ಲಿನ “ಕನ್ನಡ ಭವನ”ದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ‘ರೊನಾಲ್ಡ್ ಕೊಲಾಸೊ ಮೊಗಸಾಲೆ’ಯ (ಲೌಂಜ್) ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಬಹರೇನ್ ಕನ್ನಡ ಸಂಘದ ಅಧ್ಯಕ್ಷ ಅಮರನಾಥ ರೈ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅದೇ ದಿನ ಸಂಜೆ ಕನ್ನಡ ಸಂಘದ ಹೊಸ ಆಡಳಿತ ಮಂಡಳಿಯ ವಿದ್ಯುಕ್ತ ಪದಗ್ರಹಣ ಖಾಸಗಿ ಹೋಟೆಲ್ ನಲ್ಲಿ ನಡೆಯಲಿದ್ದು, ಇದರ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಬಹರೇನ್ ನಲ್ಲಿನ ಭಾರತೀಯ ರಾಯಭಾರಿ ವಿನೋದ್ ಕೆ. ಜೇಕಬ್ ಮತ್ತು ಜಿ.ಪರಮೇಶ್ವರ ಈ ಕಾರ್ಯಕ್ರಮದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಶಾಸಕರಾದ ರವಿಕುಮಾರ್ ಗೌಡ, ಎಐಸಿಸಿ ಕಾರ್ಯದರ್ಶಿ ಡಾ.ಆರತಿ ಕೃಷ್ಣ, ಉದ್ಯಮಿ ಹಾಗೂ ಸಮಾಜ ಸೇವಕ ಡಾ. ರೊನಾಲ್ಡ್ ಕೊಲಾಸೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಬಹರೇನ್ ಕನ್ನಡ ಭವನ ನಿರ್ಮಾಣಕ್ಕೆ ಡಾ. ರೊನಾಲ್ಡ್ ಕೊಲಾಸೊ ಅವರು ದೊಡ್ಡ ಮೊತ್ತದ ಕೊಡುಗೆ ನೀಡಿರುವುದನ್ನು ಗೌರವಿಸಿ ಇಲ್ಲಿನ ಮೊಗಸಾಲೆಗೆ ಅವರ ಹೆಸರನ್ನು ಇರಿಸಲಾಗಿದೆ.
by gadi@dmin | Sep 29, 2023 | Top ಸುದ್ದಿಗಳು, Uncategorized, ಕನ್ನಡ ನಾಡು ನುಡಿ, ಹೋರಾಟಗಾರರು
ಸಂಕಷ್ಟ ಸೂತ್ರಕ್ಕೆ ಒತ್ತಡ ಹಾಕುವ ಅಗತ್ಯವಿದೆ
ತಜ್ಞರ ತಂಡದ ಜತೆ ಚರ್ಚೆ ಬಳಿಕ ತೀರ್ಮಾನ: ಹೋರಾಟಗಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ
ಬೆಂಗಳೂರು, ಸೆಪ್ಟೆಂಬರ್ 29: ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಹೋರಾಟಗಾರರ ನಿಯೋಗಕ್ಕೆ ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕಾವೇರಿ ವಿವಾದ ಕುರಿತಂತೆ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ನೇತೃತ್ವದ ಹೋರಾಟಗಾರರ ನಿಯೋಗದೊಂದಿಗೆ ಇಂದು ನಡೆದ ಮಹತ್ವದ ಸಭೆಯಲ್ಲಿ ಅವರು ಪ್ರತಿಕ್ರಿಯಿಸಿದರು.
ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಎರಡು ಸಮಿತಿಗಳು ಪರಿಸ್ಥಿತಿ ಅವಲೋಕನ ಮಾಡಿ ಆದೇಶ ನೀಡುತ್ತವೆ. ಬಿಳಿಗುಂಡ್ಲುವಿನಲ್ಲಿ ನೀರು ಬಿಡಬೇಕೆಂದು ಆದೇಶವಾಗಿತ್ತು. ಸಾಮಾನ್ಯ ಪರಿಸ್ಥಿತಿಯಲ್ಲಿ 177.25 ಟಿ ಎಂಸಿ ನೀರನ್ನು ಒಂದು ವರ್ಷದಲ್ಲಿ ಬಿಡಬೇಕೆಂದು ಆದೇಶವಿದೆ. ನಮ್ಮ ರಾಜ್ಯಕ್ಕೆ 284. 85 ಟಿಎಂಸಿ ನೀರು ಅಗತ್ಯವಿದೆ. ಸುಪ್ರೀಂ ಕೋರ್ಟ್ ನಲ್ಲಿ ಸಂಕಷ್ಟ ಸೂತ್ರ ಸಿದ್ಧಪಡಿಸಿಲ್ಲ. 2 ಸಮಿತಿಗಳಾಗಬೇಕೆಂದು ನ್ಯಾಯಮಂಡಳಿಯೇ ತೀರ್ಮಾನ ಮಾಡಿದೆ ಎಂದು ವಿವರಿಸಿದರು.
ಪ್ರತಿ ಬಾರಿ ಸಭೆ ಕರೆದಾಗಲೂ ಪ್ರತಿಭಟಿಸುತ್ತಲೇ ಬಂದಿದ್ದೇವೆ
ಈ ವರ್ಷ ಆಗಸ್ಟ್ ನಲ್ಲಿ ಮಳೆ ಕೈಕೊಟ್ಟಿದ್ದರಿಂದ ಸಮಸ್ಯೆ ಉಂಟಾಯಿತು. ಈ ತಿಂಗಳೂ ಕೂಡ ಮಳೆ ಅಷ್ಟೇನೂ ಆಗಿಲ್ಲ. ತಮಿಳುನಾಡಿಗೆ ಹಿಂಗಾರು ಮಳೆಯಿದೆ. ಈವರೆಗೆ 43 ಟಿಎಂಸಿ ನೀರು ಹೋಗಿದೆ. 123 ಟಿಎಂಸಿ ನೀರು ಬಿಡಬೇಕು ಎಂದು ಆದೇಶವಾಗಿದೆ. ಆದರೆ ನಾವು ನೀರು ಬಿಟ್ಟಿಲ್ಲ. ಕಾವೇರಿ ಪ್ರಾಧಿಕಾರ ಪ್ರತಿ ಬಾರಿ ಸಭೆ ಕರೆದಾಗಲೂ ನಾವು ಪ್ರತಿಭಟಿಸುತ್ತಲೇ ಬಂದಿದ್ದೇವೆ. ನೀರಿಲ್ಲ ಎಂದೇ ಹೇಳಿದ್ದೇವೆ. ಸುಪ್ರೀಂಕೋರ್ಟ್ ಮುಂದೆಯೂ ಅರ್ಜಿ ಹಾಕಿದ್ದೆವು. ನಮಗೆ ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ನೀರಾವರಿಗೆ ಅಗತ್ಯವಿದೆ. 30 ಟಿ ಎಂಸಿ ಕುಡಿಯುವ ನೀರಿಗೆ ಅಗತ್ಯ. ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯ. ಒಟ್ಟು 106 ಟಿಎಂಸಿ ಅವಶ್ಯಕತೆ ರಾಜ್ಯಕ್ಕೆ ಇದೆ. ಆದರೆ ನಮ್ಮ ಬಳಿ ಇರುವುದು ಕೇವಲ 50 ಟಿಎಂಸಿ ನೀರು. ನಮ್ಮ ಮೊದಲ ಆದ್ಯತೆ ಕುಡಿಯುವ ನೀರು ಎಂದು ವಿವರಿಸಿದರು.
ಇಂದು ಸಂಜೆ ಸಭೆ
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ನೀರಾವರಿ ತಜ್ಞರು, ಮಾಜಿ ಅಡ್ವೊಕೇಟ್ ಜನರಲ್ ಗಳೊಂದಿಗೆ ಇಂದು ಸಂಜೆ ಸಭೆ ಕರೆಯಲಾಗಿದ್ದು, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು. ನೀರು ಕೊಡಬಾರದೆಂದು ನಮ್ಮ ಅನಿಸಿಕೆ. ನೀರು ಬಿಡದಿದ್ದರೆ, ಜಲಾಶಯಗಳನ್ನು ಕೇಂದ್ರ ಸರ್ಕಾರ ವಶಕ್ಕೆ ಪಡೆಯಬಹುದು, contempt of court ಆಗುತ್ತದೆ, ಸರ್ಕಾರವನ್ನು ಡಿಸ್ಮಿಸ್ ಮಾಡಬಹುದು ಎಂದು ಪರಿಸ್ಥಿತಿಯನ್ನು ವಿವರಿಸಿದರು.
ಸಭೆಯಲ್ಲಿ ಮಾತನಾಡಿದ ಕುರುಬೂರು ಶಾಂತಕುಮಾರ್ ಅವರು ಕರ್ನಾಟಕದ ಜನರಿಗೆ ಪೆಟ್ಟು ಬೀಳುವ ಆದೇಶ ಬೀಳುತ್ತಿದೆ. ಜನ ಆತಂಕಗೊಂಡಿದ್ದಾರೆ. ರೈತರ ಪರವಾಗಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಂಘಟನೆಗಳು ಜನಪರವಾಗಿ ಹೋರಾಟ ಮಾಡಿದಾಗ ಅವರ ಮೇಲೆ ಹಾಕಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಮನವಿ ಮಾಡಿದರು. ಮೇಕೆದಾಟು ಯೋಜನೆಗೆ ಶೀಘ್ರ ಕಾಯಕಲ್ಪ ನೀಡಬೇಕೆಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಚಂದ್ರು ಮಾತನಾಡಿ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಬಂದ್ ಮಾಡಿದ್ದಾರೆ. ಪ್ರಾಧಿಕಾರದ ತೀರ್ಪು ಅವೈಜ್ಞಾನಿಕವಾಗಿದೆ. ಲೋಪ ಎಲ್ಲಿ ಆಗಿದೆ ಎಂದು ಸ್ಪಷ್ಟಪಡಿಸಬೇಕು. ನಮ್ಮ ಹಕ್ಕೊತ್ತಾಯವನ್ನು ತಮಿಳುನಾಡಿನಂತೆಯೇ ತೀವ್ರವಾಗಿ ಮಾಡಬೇಕು. ಸಂಕಷ್ಟ ಪರಿಹಾರ ಸೂತ್ರ ಇಲ್ಲದಿದ್ದರೂ ನೀರು ಬಿಡುವಂತೆ ಸೂಚಿಸುವುದು ತಪ್ಪು. ಆದೇಶ ಉಲ್ಲಂಘನೆ ಮಾಡಿದರೆ ಏನಾಗುತ್ತದೆ ಎಂದು ಪಟ್ಟಿ ಮಾಡಬೇಕು ಎಂದು ಹೇಳಿದರು. ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ತಮಿಳುನಾಡು ಬೆಳೆಗೆ
ನೀರು ಕೇಳುತ್ತಿದೆ. ತಕ್ಷಣ ಸದನ ಕರೆದು ಈ ಕುರಿತು ತೀರ್ಮಾನ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ನಿಮ್ಮ ಎಲ್ಲಾ ಬೇಡಿಕೆಗಳ ಬಗ್ಗೆ ಸಂಜೆ ತಜ್ಞರ ತಂಡದ ಜತೆಗೂ ಚರ್ಚಿಸಲಾಗುವುದು. ಬಳಿಕ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ನಿಯೋಗದಲ್ಲಿ ರೈತ, ದಲಿತ, ಕಾರ್ಮಿಕ ಮತ್ತು ಕನ್ನಡ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
by gadi@dmin | Sep 29, 2023 | Top ಸುದ್ದಿಗಳು, ಕನ್ನಡ ನಾಡು ನುಡಿ, ರಾಜ್ಯ
ಹಂಪಿಗೆ ಮತ್ತೊಂದು ಪ್ರಶಸ್ತಿಯ ವಿಶೇಷ ಗರಿ
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರ ನೀಡುವ “ಪ್ರವಾಸಿ ಗ್ರಾಮ ಪ್ರಶಸ್ತಿ” ಯು ನಮ್ಮ ಹಂಪಿ ಗ್ರಾಮಕ್ಕೆ ದೊರೆತದ್ದು ಅತ್ಯಂತ ಖುಷಿಯ ಸಂಗತಿ. ಕಳೆದ ವಾರವಷ್ಟೇ ಹೊಯ್ಸಳರ ಕಾಲದ ದೇವಾಲಯಗಳು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಂಡಿದ್ದವು,
ಈಗ ಹಂಪಿ ಗ್ರಾಮವು ಉತ್ತಮ ಪ್ರವಾಸಿ ಗ್ರಾಮವಾಗಿ ಗುರುತಿಸಲ್ಪಟ್ಟಿರುವುದರಿಂದ ನಮ್ಮ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಮತ್ತಷ್ಟು ಚೈತನ್ಯ ಮತ್ತು ಉತ್ತೇಜನ ನೀಡುತ್ತದೆ.
ಕರ್ನಾಟಕ ಎಂದರೆ ಐತಿಹಾಸಿಕ ಪ್ರವಾಸಿಗಳ ತಾಣ. ಈ ತಾಣಗಳು ಸೌಂದರ್ಯಕ್ಕೆ ಭೂಷಣ ಎಂದು ಸಣ್ಣ ನೀರಾವರಿ ಸಚಿವರಾದ ಎನ್ ಎಸ್ ಭೋಸರಾಜ್ ರವರು ಹರ್ಷ ವ್ಯಕ್ತ ಪಡಿಸಿದ್ದಾರೆ.
by gadi@dmin | Sep 6, 2023 | Top ಸುದ್ದಿಗಳು, ಕನ್ನಡ ನಾಡು ನುಡಿ
ಬಾಗಲಕೋಟೆ- ಕುಡಚಿ ರೈಲ್ವೆ ಮಾರ್ಗ 2025ಕ್ಕೆ ಪೂರ್ಣ – ಪಾಟೀಲ
ಗದಗ- ವಾಡಿ ರೈಲ್ವೆ ಮಾರ್ಗ ಮುಗಿಸಲು 2026ರ ಮಾರ್ಚ್ ಗಡುವು- ಸಚಿವ ಎಂ ಬಿ ಪಾಟೀಲ
ಎರಡು ಮಹತ್ವದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು
ಬೆಂಗಳೂರು : ಉತ್ತರ ಕರ್ನಾಟಕ ಭಾಗದ ಮಹತ್ವದ ರೈಲ್ವೆ ಯೋಜನೆಗಳಲ್ಲಿ ಒಂದಾದ 257 ಕಿಲೋಮೀಟರ್ ಉದ್ದದ ಗದಗ- ವಾಡಿ ನಡುವಿನ ಮಾರ್ಗವನ್ನು 2026ರ ಮಾರ್ಚ್ ಒಳಗೆ ಮುಗಿಸುವ ಗಡುವು ಹಾಕಿಕೊಳ್ಳಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ ಬುಧವಾರ ಹೇಳಿದ್ದಾರೆ.
ಉತ್ತರ ಕರ್ನಾಟಕದ ಎರಡು ಮುಖ್ಯ ರೈಲ್ವೆ ಯೋಜನೆಗಳಾದ ಗದಗ-ವಾಡಿ ಮತ್ತು ಬಾಗಲಕೋಟೆ-ಕುಡಚಿ ನಡುವಿನ ಮಾರ್ಗಗಳ ಪ್ರಗತಿ ಪರಿಶೀಲನೆ ಬಗ್ಗೆ ಪ್ರತ್ಯೇಕ ಸಭೆಗಳನ್ನು ನಡೆಸಿದ ಸಂದರ್ಭದಲ್ಲಿ ಅವರು ಹೀಗೆ ಹೇಳಿದರು.
ಒಟ್ಟು ರೂ. 1,922 ಕೋಟಿ ಅಂದಾಜು ವೆಚ್ಚದ ಈ ಯೋಜನೆಯು ರಾಜ್ಯ ಸರ್ಕಾರ ಮತ್ತು ರೈಲ್ವೆ ಇಲಾಖೆಗಳ ತಲಾ ಶೇಕಡಾ 50ರಷ್ಟು ವೆಚ್ಚ ಹಂಚಿಕೆಯಲ್ಲಿ ನಡೆಯುತ್ತಿದೆ. ಈ ಕಾಮಗಾರಿಗೆ 4,002 ಎಕರೆ ಭೂಮಿ ಅಗತ್ಯವಿದ್ದು, ಈಗಾಗಲೇ 3,945 ಎಕರೆ ಭೂಮಿಯನ್ನು ಕಾಮಗಾರಿಗಾಗಿ ಬಿಟ್ಟುಕೊಡಲಾಗಿದೆ. ಮಿಕ್ಕ 57 ಎಕರೆ ಭೂಮಿಯನ್ನು ಇನ್ನೊಂದು ತಿಂಗಳೊಳಗೆ ಕೊಡಲಾಗುತ್ತದೆ ಎಂದು ಸಚಿವರು ವಿವರಿಸಿದರು.
ಗದಗದಿಂದ ತಳಕಲ್ ವರೆಗೆ ಈಗಾಗಲೇ ರೈಲ್ವೆ ಹಳಿ ಇದೆ. ತಳಕಲ್ ನಿಂದ ಕುಷ್ಟಗಿವರೆಗಿನ 57 ಕಿ.ಮೀ. ಪೈಕಿ ಹನುಮಪುರದವರೆಗೆ ಕೆಲಸ ಮುಗಿದಿದೆ. ಕುಷ್ಟಗಿವರೆಗಿನ ಮಾರ್ಗ ಮಾರ್ಚ್ 24ರೊಳಗೆ ಮುಗಿಯಲಿದೆ.ಅದಾದ ಮೇಲೆ ಇಲ್ಲಿ ಪ್ರಾಯೋಗಿಕ ರೈಲು ಸಂಚಾರ ಆರಂಭವಾಗಲಿದೆ ಎಂದು ಪಾಟೀಲ ತಿಳಿಸಿದರು.
ಇನ್ನೊಂದು ಭಾಗದಲ್ಲಿ ವಾಡಿ ಕಡೆಯಿಂದ ಶೋರಾಪುರದವರೆಗೆ ಕಾಮಗಾರಿ ನಡೆಯುತ್ತಿದೆ ಎಂದೂ ಹೇಳಿದರು.
ಗದಗ-ವಾಡಿ ರೈಲು ಮಾರ್ಗ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಒತ್ತು ಕೊಡುವಂತೆ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರು ಸಚಿವರನ್ನು ಕೋರಿದರು. ಆಗ ಸಚಿವ ಪಾಟೀಲರು ಸಭೆಯಲ್ಲಿದ್ದ ರೈಲ್ವೆ ಅಧಿಕಾರಿಗಳಿಗೆ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಗಮನಹರಿಸಲು ಸೂಚಿಸಿದರು. ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ತಂಡಗಳನ್ನು ಕಳುಹಿಸಿ ಗುಣಮಟ್ಟ ಖಾತ್ರಿ ಗೊಳಿಸಿಕೊಳ್ಳುವಂತೆಯೂ ನಿರ್ದೇಶನ ನೀಡಿದರು.
ಒಟ್ಟಾರೆ, ಈ ರೈಲ್ವೆ ಮಾರ್ಗದ ಕಾಮಗಾರಿ 2026ರ ಮಾರ್ಚ್ ಅವಧಿಯನ್ನು ಮೀರುವಂತಿಲ್ಲ. ಈ ಕಾಲಮಿತಿ ಮೀರಿ ಪುನಃ ಕಾಮಗಾರಿ ವೆಚ್ಚ ಹೆಚ್ಚಳವಾಗದಂತೆ ಗಮನ ವಹಿಸಬೇಕು ಎಂದರು.
ಮತ್ತೊಂದು ಯೋಜನೆಯಾದ, ಬಾಗಲಕೋಟೆ- ಕುಡಚಿ, 142 ಕೋಟಿ ಕಿ.ಮೀ. ಉದ್ದದ ರೂ 1,530 ಕೋಟಿ ವೆಚ್ಚದ ಕಾಮಗಾರಿಗೆ ಬೇಕಾಗಿದ್ದ 2,496 ಎಕರೆ ಭೂಮಿಯ ಪೈಕಿ 2,476 ಎಕರೆ ಈಗಾಗಲೇ ಹಸ್ತಾಂತರವಾಗಿದೆ. ಉಳಿದ 20 ಎಕರೆ ಭೂಮಿಯನ್ನು ಸದ್ಯದಲ್ಲೇ ಬಿಟ್ಟುಕೊಡಲಾಗುವುದು. 2025ರ ಡಿಸೆಂಬರ್ ಒಳಗೆ ಈ ಕಾಮಗಾರಿ ಮುಗಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
ಇದೇ ವೇಳೆ ಸಚಿವರು ಈ ಯೋಜನೆಯನ್ನು ಸಾಧ್ಯವಾದರೆ 2025ರ ಏಪ್ರಿಲ್ ಒಳಗೆ, ಅಂದರೆ ಆರು ತಿಂಗಳು ಮುಂಚಿತವಾಗಿ ಮುಗಿಸಲು ಸಂಬಂಧಪಟ್ಟ ಅಧಿಕಾರಿಗಳನ್ನು ಕೋರಿದರು.
ಬಾಗಲಕೋಟೆ- ಖಚ್ಚಿದೋಣಿ- ಲೋಕಾಪುರದವರೆಗಿನ 60 ಕಿ.ಮೀ. ರೈಲ್ವೆ ಕಾಮಗಾರಿ 2024ರ ಮಾರ್ಚ್ ವೇಳೆಗೆ ಮುಗಿಯಲಿದೆ. ಆನಂತರ, ಈ ಭಾಗದಲ್ಲಿ ರೈಲು ಸಂಚಾರ ಆರಂಭವಾಗಲಿದೆ. ಮತ್ತೊಂದು ಕಡೆ ಕುಡಚಿ ಭಾಗದಿಂದ ಕಾಮಗಾರಿ ಆರಂಭಿಸಲು ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಕೆಲಸಗಳಿಗೆ ಚಾಲನೆ ಕೊಡಬೇಕಿದೆ. ಕುಡಚಿಯಿಂದ ಜಗದಾಳ್ ವರೆಗಿನ ಕೆಲಸ ಶುರುವಾಗಲಿದೆ ಎಂದರು.
ಶಾಸಕ ಬಸವರಾಜ ರಾಯರೆಡ್ಡಿ ಮತ್ತು ಎಂ.ಎಲ್.ಸಿ. ಹಾಗೂ ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಪ್ರಕಾಶ್ ಹುಕ್ಕೇರಿ ಅವರು ನಂತರ ಸಚಿವ ಎಂ ಬಿ ಪಾಟೀಲ ಅವರು ಯೋಜನೆಗಳ ಕಾಮಗಾರಿಗಳ ಬಗ್ಗೆ ಮುತುವರ್ಜಿ ವಹಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಪ್ಪಳ ಸಂಸದ ಕರಡಿ ಸಂಗಣ್ಣ, ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ್, ರೈಲ್ವೆ ಅಧಿಕಾರಿಗಳು, ಮೂಲಸೌಕರ್ಯ ಇಲಾಖೆ ಎಸಿಎಸ್ ಗೌರವ ಗುಪ್ತ, ಹಾಜರಿದ್ದರು. ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪಾಲ್ಗೊಂಡಿದ್ದರು.